ಶ್ರೀರಾಮನವಮಿಯ ದಿವಸ

ಶ್ರೀರಾಮನವಮಿಯ ದಿವಸ ರಾಮನಾಮಾಮೃತವೆ
ಪಾನಕ, ಪನಿವಾರ, ಕೋಸಂಬರಿ;
ಕರಬೂಜ ಸಿದ್ದೋಟುಗಳ ಹೋಳು, ಸೀಕರಣೆ;
ವ್ಯಕ್ತ ಮಧ್ಯಕ್ಕೆ ಬಂದುರಿವ ಶಬರಿ.

ಕಾದು ಗಾರಾದ ಮಣ್ಣೊಡಲಿನೊಳಗಡೆಗೆ ಕಿಡಿ –
ಕುಳಿತ ಮೂಲಾಧಾರ ಜೀವಧಾತು
ಮೋಡದ ಸಹಸ್ರಾರದೆಡೆಗೆ ತುಡಿಯುವ ತುರುಸು:
ಮಣ್ಣೊಡೆದ ಹಸರು ಹೂ ಹುಲ್ಲು ಮುಳ್ಳು.

ಮಣ್ಣುಟ್ಟ ಪುಟ್ಟ ಬಿತ್ತಕ್ಕೆ ಮಳೆಹನಿಸೇಕ:
ಅಶ್ವತ್ಥದ ವಿವರ್ತ ನಿತ್ಯ ಘಟನೆ;
ಗುಮ್ಮಟಗಿರಿಯ ನೆತ್ತಿಯಲ್ಲಿ ಕಲ್ಲರಳಿದ್ದು
ಕಾರ್ಯಕಾರಣದೊಂದಪೂರ್ವ ನಟನೆ.

ನೆಲಕ್ಕಂಟಿ ಬಿದ್ದ ಆಕಾಶಯಾನದ ಕನಸು
ಜೆಟ್‌ ವಿಮಾನವೇರಿ ಕೊಂಚ ದೂರ
ತೇಲಿ ಮಣ್ಣಿಗೆ ಮರಳಿ, ರಾಕೆಟ್ಟು ಜಗಿದುಗುಳಿ
ತಿಂಗಳಿಗೆ ಬಡಿವಾಧುನಿಕ ವಿಕಾರ.

ವೇದೋಪನಿಷದಗಳ ಭೂತಗನ್ನಡಿಯೊಳಗೆ
ಪಡಿಮೂಡಿದಾಕೃತಿಗೆ ತಾನೆ ಮುಗ್ಧ
ಮತ್ಸ್ಯ ಕೂರ್ಮವರಾಹಮೆಟ್ಟಲುಗಳೇರುತ್ತ
ಹುತ್ತಗಟ್ಟಿದ್ದ ಕೈ ಕಡೆದ ನೋಟ:

ಕೌಸಲ್ಯೆ ದಶರಥರ ಪುತ್ರಕಾಮೇಷ್ಟಿ ಗೆರೆ
ಹಠಾತ್ತಾಗಿ ತಾಗಿರೆ ತ್ರಿಕಾಲ ಚಕ್ರ,
ಆಸ್ಫೋಟಿಸಿತ್ತು ಸಿಡಿತಲೆ: ಗರಿಷ್ಠ ತೇಜದ ಮೊನೆ
ಕೆಳಪಟ್ಟು ಮಣ್ಣುಟ್ಟು ನಿಂತ ಘಟನೆ:

ಬೆಳ್ಳಂಬೆಳಕಿನಲ್ಲಿ ಬಿಳಿಹಾಯಿಗಳ ಪರದಾಟ,
ಹಾಲ್ಗಡಲ ಬಗೆದೊಲೆವ ರಾಜಹಂಸ;
ಅಂತರಂಗದ ಸುರುಳಿ ಬಿಚ್ಚಿ ಸರ್ಚ್‌ಲೈಟಲ್ಲಿ
ಹೆದ್ದಾರಿ ಹಾಸಿದ್ದ ರಾಮಚರಿತ.

ಸಂಕಲ್ಪಬಲದ ಜಾಗರಣೆ; ಕತ್ತಲಿನೆಡೆಗೆ
ಕಣೆ, ದಂಡಕಾರಣ್ಯಕ್ಕೆ ಹಗಲ ದೊಣ್ಣೆ;
ಮಣ್ಣಿನಣುಗಿಯ ಸೆಳವಿನಲ್ಲಿ ಲಂಕೆಗೆ ಬೆಂಕಿ;
ಸುಟ್ಟಲ್ಲದೇ ಮುಟ್ಟಿನಂಬುಡಾಫೆ.

ವಿಜೃಂಭಿಸಿತು ರಾಮಬಾಣ; ನಿಜ. ಕತ್ತಲಿಗೆ
ಹತ್ತೆ ತಲೆ? ನೂರಾರೆ? ಅದು ಅಸಂಖ್ಯ:
ಕತ್ತರಿಸಿದರೆ ಬೆಳೆವ, ಬೆಳೆದು ಕತ್ತಿಗೆ ಬರುವ
ಅನಾದಿ; ಕೋದಂಡ ದಂಡವೂ ಹೀಗೆ ದಂಡ;

ಅಥವಾ ಚಕ್ರಾರಪಂಕ್ತಿ: ಚಕಮಕಿ ಕಲ್ಲ ನುಜ್ಜುತ್ತ
ಕೂತುಕೊಂಡಿದ್ದೇನೆ ಕತ್ತಲೊಳಗೆ,
ಪನಿವಾರ ತಿಂದು ಪಾನಕ ಕುಡಿದು ನೋನುತ್ತ
ಸ್ಪೋಟಕ್ಕೆ ಕಾದು ಕಿವಿ ಕಂಪಿಸುತ್ತ.

ಷಟ್ಚಕ್ರ ರಾಕೆಟ್ಟುಗಳ ಹಂತಹಂತಕ್ಕೆ
ಅಂಚೆ ತಲುಪೀತೇ ಸಹಸ್ರಾರಕೆ?
ಹುತ್ತಗಟ್ಟದೆ ಚಿತ್ತ ಮತ್ತೆ ಕೆತ್ತೀತೇನು
ಪುರುಷೋತ್ತಮನ ಆ ಅಂಥ ರೂಪ – ರೇಖೆ?

(ಗೋಪಾಲಕೃಷ್ಣ ಅಡಿಗ)